ಚಿತ್ರದುರ್ಗ: ಹಾಸ್ಟೇಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ನಲ್ಲಿ ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.
ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಶ್ರೀಗಳು ನಿರೀಕ್ಷಣ ಜಾಮೀನುಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿದ್ದು, ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ.